ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸದ್ಯದ ಮಾಹಿತಿ ಪ್ರಕಾರ ದೇಶದ ವಿವಿಧ ರಾಜ್ಯಗಳಲ್ಲಿ 24 ಗಂಟೆಯಲ್ಲಿ ಇಂದು 773 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 5,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಗರ್ವಾಲ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಅವರು, ಇಂದು ದೇಶಾದ್ಯಂತ ಹೊಸದಾಗಿ 773 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 5,194ಕ್ಕೆ ಏರಿಕೆಯಾಗಿದೆ ಎಂದರು. ಇನ್ನು ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದಾಗಿ 32 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೊನಾ ಸೋಂಕಿತ 402 ಜನರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.








