ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಇಂದು ಟ್ವೀಟ್ ಮಾಡಿದೆ.
ದೇಶಾದ್ಯಂತ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಏಪ್ರಿಲ್ 14 ರಂದು ಅಂತ್ಯವಾಗುತ್ತಿದೆ. ಆದ್ರೆ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿರುವ ಕಾರಣ ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಏಪ್ರಿಲ್ 30 ರವರೆಗೆ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಖಚಿತವಾಗಿರುವ ಸಂದರ್ಭದಲ್ಲಿ ಸೋಂಕಿನ ತೀವ್ರತೆ ಆಧರಿಸಿ ಜಿಲ್ಲೆಗಳನ್ನು ಮೂರು ವಲಯಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ.
ಆರ್ಥಿಕತೆ ಚೇತರಿಕೆಗೆ ಗಮನ ಹರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಂಕಿನ ತೀವ್ರತೆ ಕಡಿಮೆಯಿರುವಂತಹ ಪ್ರದೇಶಗಳಲ್ಲಿ ಲಾಕ್ಡೌನ್ ನಿರ್ಬಂಧಗಳ ಸಡಿಲಿಕೆಯ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಾಗಿ ಜಿಲ್ಲೆಗಳನ್ನು ವಿಂಗಡಿಸಲು ಸರಕಾರ ಸಿದ್ಧತೆ ಆರಂಭಿಸಿದೆ.








