ಬೆಂಗಳೂರು: ಕೊರೊನಾ ಲಾಕ್ ಡೌನ್ ಮೇ 3 ರ ತನಕ ವಿಸ್ತರಿಸಿದ ಮೋದಿಯ ನಿರ್ಧಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬೆಂಬಲ ಸೂಚಿಸಿದ್ದಾರೆ. ಮೋದಿ ಭಾಷಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಡಿ, ಕೊರೊನಾ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ ಎಂದು ಹೇಳಿದ್ದಾರೆ
ರಾಜಕಾರಣ ಬೇರೆ. ಆದರೆ ದೇಶದ ವಿಚಾರದಲ್ಲಿ ನಾವು ಜೊತೆಗಿರುತ್ತೇವೆ. ಲಾಕ್ ಡೌನ್ ಸಂದರ್ಭದಲ್ಲಿ ಕೆಲವು ದೋಷಗಳಿವೆ. ಅನೇಕ ಕೂಲಿ ಕಾರ್ಮಿಕರು ಕಾಲ್ನಡಿಗೆಯಲ್ಲಿ ಗುಳೆ ಹೋಗುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡಲಾಗುತ್ತಿಲ್ಲ. ಗುತ್ತಿಗೆದಾರರಿಗೆ ಕಾರ್ಮಿಕರ ರಕ್ಷಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ಕೊಟ್ಟಿದ್ದರೂ ಅನೇಕ ಕಡೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ದೇಶದಲ್ಲಿ ಆರ್ಥಿಕವಾಗಿ ಕೆಲವು ಸಂಕಷ್ಟಗಳಿವೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮಾಡಿದ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದ್ರೆ ಇದುವರೆಗೂ ಪ್ರಧಾನಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.