ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹ ಮಹೋತ್ಸವದಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ನಿಖಿಲ್ ಮತ್ತು ರೇವತಿ ವಿವಾಹ ಕಾರ್ಯಕ್ರಮವನ್ನು ಚಿತ್ರೀಕರಿಸಿ ದಾಖಲೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಮನಗರ ತಾಲೂಕಿನ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಶುಕ್ರವಾರ ವಿವಾಹ ನಿಗದಿಯಾಗಿದೆ. ಆದರೆ, ಲಾಕ್ ಡೌನ್ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವಂತಹ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧಿಸಿದೆ. ವಿವಾಹಗಳು ನಡೆದರೂ ಹೆಚ್ಚು ಜನ ಸೇರದಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಆದೇಶ ಹೊರಡಿಸಿದೆ.








