ಬಾಗಲಕೋಟೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ : ಸಚಿವರಿಗೆ ಸಿದ್ದರಾಮಯ್ಯ ಕರೆ
ಬಾಗಲಕೋಟೆ : ಜಿಲ್ಲೆಯಲ್ಲಿ ಆಕ್ಸಿಜನ್, ರೆಮ್ ಡಿಸಿವಿಆರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಸಿಎಂ ಅಶ್ವತ್ಥನಾರಾಯಣ, ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿವ ರವಿಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ದೂರವಾಣಿ ಕರೆಯಲ್ಲಿ ಬಾದಾಮಿ ಕ್ಷೇತ್ರ ಸೇರಿದಂತೆ ಬಾಗಲಕೋಟೆ ಜಿಲ್ಲೆ ಸೋಂಕಿತರಿಗೆ ಬೆಡ್, ಆಕ್ಸಿಜನ್ ತೊಂದರೆ ಆಗದಂತೆ ವ್ಯವಸ್ಥೆ ಮಾಡಿ. ಬಾಗಲಕೋಟೆ ಜಿಲ್ಲೆಗೆ ಪ್ರತಿ ದಿನ 15 ಕೆಎಲ್ ಆಕ್ಸಿಜನ್ ಅಗತ್ಯ ಇದೆ. ಹೀಗಾಗಿ ತಕ್ಷಣವೇ ಅಷ್ಟು ಆಕ್ಸಿಜನ್ ಪೂರೈಕೆಗೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಅಲ್ಲದೆ ಬಾಗಲಕೋಟೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ಬಾದಾಮಿ ಕ್ಷೇತ್ರದಲ್ಲೂ ಸಮಸ್ಯೆ ತೀವ್ರಗೊಂಡಿದೆ. ಈ ಬಗ್ಗೆಯೂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅವರಿಗೆ ಗುಳೆ ಹೋಗಿ ಊರಿಗೆ ವಾಪಸ್ಸು ಬಂದವರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ, ವೇತನ ಕೊಟ್ಟು, ಜನರಿಗೆ ಪಡಿತರ ಧಾನ್ಯವನ್ನು ಅಚ್ಚುಕಟ್ಟಾಗಿ ವಿತರಿಸುವಂತೆ ಸೂಚನೆ ನೀಡಿದ್ದಾರೆ.









