ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 12 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಕಲಬುರ್ಗಿಯ ಇಬ್ಬರಿಗೆ, ವಿಜಯಪುರದ ಒಬ್ಬರಿಗೆ, ಧಾರವಾಡದ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ, ಮೈಸೂರಿನ ಮೂವರಿಗೆ, ಬಾಗಲಕೋಟೆಯ ಇಬ್ಬರಿಗೆ, ಗದಗ ಒಬ್ಬರಿಗೆ ಮತ್ತು ಮಂಡ್ಯದ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಕಳೆದ ಎರಡು ದಿನಗಳಿಗೆ ಹೋಲಿಸಿದ್ರೆ ಇಂದು ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ ಹಾಗೂ ಮೊನ್ನೆ ಒಂದೇ ದಿನ 30ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು. ಈವರೆಗೆ ರಾಜ್ಯದಲ್ಲಿ 13 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 92 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.








