ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಸ್ವಲ್ಪ ಸಡಿಲ ಮಾಡಲಾಗಿದ್ದು, ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ದ್ವಿಚಕ್ರ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಮೊನ್ನೆ 36, ನಿನ್ನೆ 44 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಆದರೆ ಇಂದು 12 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಸಮಾಧಾನಕರ ವಿಚಾರ ಎಂದರು.
ಇನ್ನು ನಗರದಲ್ಲಿ ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಏಪ್ರಿಲ್ 20ರ ನಂತರ ಐಟಿ, ಬಿಟಿ ಕಂಪನಿಯ ಶೇ. 33ರಷ್ಟು ನೌಕರರು ಕಚೇಯಿಂದ ಕೆಲಸ ಮಾಡಬಹುದು. ಕಚೇರಿಗೆ ತೆರಳಲು ಪೊಲೀಸರಿಂದ ಪಾಸ್ ಪಡೆಯುವ ಅಗತ್ಯ ಇಲ್ಲ. ಕಟ್ಟಡ ಕಾಮಗಾರಿ ಮುಂದುವರೆಸಬಹುದು ಎಂದರು.
ಇದೇ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಮೇ 3ರ ನಂತರವೇ ಆ ಬಗ್ಗೆ ನಿರ್ಧರಿಸಲಾಗುವುದು ಎಂದರು.








