ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ನಡೆದಿದೆ ಎಂಬ ಸಂಶಯವಿದೆ ಎಂದು ಶಾಸಕ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಈ ಬಗ್ಗೆ ನಾನು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ.
ಈ ವಿಚಾರದ ಕುರಿತು ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಅಹಿತಕರ ಘಟನೆ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ. ಕೊರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಅಲ್ಲದೆ ಈ ಗಲಾಟೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿಬೇಕು. ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಕೆಲಸ ಶೀಘ್ರವಾಗಿ ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ಜೊತೆಗೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.