ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಅವರು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ‘ಏಮ್ಸ್’ನಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅನೇಕ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಸಿಂಗ್ ಅವರು ಮಾರ್ಚ್ 13ರಿಂದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಸೇರಿದಂತೆ ವಯೋಸಹಜ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ನಿನ್ನೆಯಿಂದ ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು, ಆರೋಗ್ಯ ಕ್ಷೀಣಿಸುತ್ತಿರುವುದಾಗಿ ವೈದ್ಯರು ತಿಳಿಸಿದ್ದರು.
ಇನ್ನು ಕೊರೊನಾ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಯೋಗಿ ಆದಿತ್ಯನಾಥ ಅವರು ಸಭೆ ನಡೆಸುತ್ತಿದ್ದರು. ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ ನಂತರವೂ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಇರುವಾಗಲೇ ತಂದೆ ಮೃತಪಟ್ಟಿರುವ ಸುದ್ದಿ ಅವರಿಗೆ ತಲುಪಿದೆ.
ಆನಂದ್ ಸಿಂಗ್ ಅವರ ನಿಧನಕ್ಕೆ ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕೆ. ಅವಸ್ಥಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.








