ನಾಳೆ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ ಲಸಿಕೆ
ಬೆಂಗಳೂರು : ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದೊಂದಿಗೆ ನಾಳೆ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು.
ಈ ಲಸಿಕಾ ಅಭಿಯಾನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಇಲಾಖೆ ಸಚಿವ ಡಾ. ನಾರಾಯಣಗೌಡ ಚಾಲನೆ ನೀಡಲಿದ್ದಾರೆ.
ಈಗಾಗಲೇ 2200 ಕ್ರೀಡಾಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಜೂನ್ 10 ಮತ್ತು 11 ರಂದು ಇವರಿಗೆ ಲಸಿಕೆ ನೀಡಲಾಗುವುದು.
ಇದುವರೆಗೂ ಹೆಸರನ್ನು ನೋಂದಾಯಿಸಿಕೊಳ್ಳದ ಕ್ರೀಡಾಪಟುಗಳು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಆಯಾ ರಾಜ್ಯ ಕ್ರೀಡಾ ಸಂಸ್ಥೆಗಳ ಮೂಲಕ ನೋಂದಾಯಿಸಿಕೊಳ್ಳಬಹುದು.
ನಾಳೆ ಬಾಸ್ಕೆಟ್‍ಬಾಲ್, ಫೆನ್ಸಿಂಗ್, ಈಜು, ಹಾಕಿ, ಟೆನ್ನಿಕಾಯ್ಸ್, ಬ್ಯಾಡ್ಮಿಂಟನ್, ರೋಯಿಂಗ್ ಮತ್ತು ನೆಟ್‍ಬಾಲ್ ಕ್ರೀಡೆಗಳ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುತ್ತದೆ.
ಶುಕ್ರವಾರದಂದು ಶೂಟಿಂಗ್, ಹ್ಯಾಂಡ್‍ಬಾಲ್, ಫುಟ್ಬಾಲ್ ಅಥ್ಲೆಟಿಕ್ಸ್, ಟೇಬಲ್ ಟೆನ್ನಿಸ್, ವಾಲಿಬಾಲ್ ಮತ್ತು ರೋಲರ್ ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುತ್ತದೆ.









