ಕಾಂಗ್ರೆಸ್ಸಿಗರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ : ಆರ್.ಅಶೋಕ್
ಬೆಂಗಳೂರು : ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಬರೀ ಪೆÇಳ್ಳು ಟೀಕೆ, ಆಪಾದನೆಗಳಲ್ಲಿ ಕಾಲ ಕಳೆಯುತ್ತಿದೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.
ಬ್ಯಾಟರಾಯನಪುರ ಕ್ಷೇತ್ರದಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಆರ್.ಅಶೋಕ್, ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಕ್ಕೆ ಉಚಿತ ಲಸಿಕೆ ನೀಡಿದ್ದಾರೆ. ಯಡಿಯೂರಪ್ಪನವರು 1500 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್‍ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ಘೋಷಿಸಿದೆ. ಇಷ್ಟೆಲ್ಲಾ ಕೆಲಸಗಳನ್ನ ಮಾಡುತ್ತಿದ್ದರೂ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.
ಕಾಂಗ್ರೆಸ್ಸಿನವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ. ಕಷ್ಟದ ಸಂದರ್ಭಗಳಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್ ವೃಥಾ ಆರೋಪಗಳನ್ನ ಮಾಡುತ್ತಿದೆ. ವಿರೋಧ ಪಕ್ಷಗಳು ಏನೇ ಮಾತನಾಡಿದರು ನಾವು ಮಾತ್ರ ಸದಾ ಜನರ ಕಷ್ಟದಲ್ಲಿ ಜೊತೆಯಾಗಿರುವ ಕೆಲಸ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್‍ನಿಂದ ಸಾವನ್ನಪ್ಪಿದವರ ಕುಟುಂಬದ ಬೆಂಬಲಕ್ಕೆ ನಿಲ್ಲುವ ನಿಟ್ಟಿನಲ್ಲಿ ನಾನೂ ಹಾಗೂ ಆರು ಜನ ಸಚಿವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂಥಹ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜೊತೆಗೆ ಪರಿಹಾರ ಹಣವನ್ನು ನೀಡಿದ್ದೇವೆ. ಇದೊಂದು ಕಷ್ಟದ ಘಳಿಗೆಯಾಗಿದೆ. ನಮ್ಮ ಸರ್ಕಾರ ಸಂಪೂರ್ಣವಾಗಿ ಬಡವರ ಹಾಗೂ ನೆರವಿನ ನಿರೀಕ್ಷೆಯಲ್ಲಿರುವವರ ಜೊತೆಯಲ್ಲಿ ನಿಲ್ಲಲಿದೆ ಎಂದು ಇದೇ ವೇಳೆ ಭರವಸೆ ನೀಡಿದರು.









