ಕಾಲೇಜುಗಳ ಆರಂಭಕ್ಕೆ ಯಾವುದೇ ಚರ್ಚೆ ನಡೆಸಿಲ್ಲ : ಡಿಸಿಎಂ ashwath narayan
ಹುಬ್ಬಳ್ಳಿ : ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳು ಯಾವಾಗ ಓಪನ್ ಆಗುತ್ತವೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತಗ್ಗಿದ್ದು, ಇನ್ನೇನು ಕಾಲೇಜುಗಳು ತೆರೆದುಕೊಳ್ಳುತ್ತವೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಸರ್ಕಾರ ಈವರೆಗೂ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ. ಬದಲಾಗಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಿದೆ. ಮೂಲಗಳ ಪ್ರಕಾರ ಶೇಕಡಾ 80 ರಷ್ಟು ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡರೇ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎ ಅಶ್ವಥ್ ನಾರಾಯಣ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನವೆಂದು ಹಾಗೇ ಇರಲು ಸಾಧ್ಯ ಎಂದು ಪ್ರಶ್ನಿಸಿದರು.