ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ
ದಕ್ಷಿಣಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ.
ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾಗ ಈ ಘಟನೆ ನಡೆದಿದೆ.
ಕಾವಳಮೂಡೂರು ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಈ ಸಂದರ್ಭದಲ್ಲಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಅಲ್ಲದೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.
ಪುಂಜಾಲಕಟ್ಟೆ ಎಸ್ ಐ ಸೌಮ್ಯ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು. ಕಾರ್ಯಕರ್ತರನ್ನು ಲಾಟಿ ಬೀಸಿ ಪೊಲೀಸರು ಚದುರಿಸಿದರು.
ಕಾಂಗ್ರೆಸ್ ಕಾರ್ಯಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.
ಪುಂಜಾಲಕಟ್ಟೆ ಪೊಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.









