ನವದೆಹಲಿ : ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ದಿನೇದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸದ್ಯ ಸೋಂಕಿತರ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಇನ್ನಷ್ಟು ಭೀತಿ ತಂದೊಡ್ಡಿದೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 394 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, 18 ಮಂದಿ ಕೊರೊನಾಸುರನಿಗೆ ಬಲಿಯಾಗಿದ್ದಾರೆ. ಈ ಸಂಬಂಧ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಟ್ಟಾರೆ, ಸೋಂಕು ಪೀಡಿತರ ಸಂಖ್ಯೆ 6817ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಈವರೆಗೆ ಡೆಡ್ಲಿ ಕೊರೊನಾಗೆ 301 ಮಂದಿ ಬಲಿಯಾಗಿದ್ದಾರೆ.
ಇನ್ನು ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಕಳೆದ 24 ಗಂಟೆಗಳ ಅವಧಿಯಲ್ಲಿ 61 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಆಂಧ್ರಪ್ರದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1016ಕ್ಕೆ ಏರಿಕೆಯಾಗಿದ್ದು, ಈವರೆಗೆ 171 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಈವರೆಗೆ 31 ಮಂದಿ ಬಲಿಯಾಗಿದ್ದಾರೆ.








