ಯಡಿಯೂರಪ್ಪ ಬಗ್ಗೆ ನನಗೆ ಅನುಕಂಪವಿದೆ : ಸಿದ್ದರಾಮಯ್ಯ
ಬೆಂಗಳೂರು : ಯಡಿಯೂರಪ್ಪ ಅವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಎಸ್ ವೈ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನಿರೀಕ್ಷಿತವಾದುದು. ಹಿಂದೆಯೇ ನಾನು ಹೇಳಿರುವುದು ನಿಜವಾಗಿದೆ. ಈ ಬಗ್ಗೆ ಸಂಭ್ರಮ ಪಡುವಂತಹದ್ದೇನೂ ಇಲ್ಲ. ಭ್ರಷ್ಟ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು. ಆ ದಿನಗಳು ಸದ್ಯದಲ್ಲಿಯೇ ಬರಲಿದೆ.
ಯಡಿಯೂರಪ್ಪ ಅವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ.
ಬಿಜೆಪಿ ಅವರು ಹೋದರೂ, ಇನ್ನೊಬ್ಬರು ಬಂದರೂ ಅದರ ಭ್ರಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ.
ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುವುದು ಪ್ರಜಾಪ್ರಭುತ್ವದ ರೂಢಿ. ಆದರೆ ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಅವರ ಸರ್ಕಾರದ ಭ್ರಷ್ಟಾಚಾರವೇ?
ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜಾರಿ ಪಾರ್ಟಿ’. ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ. ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂದು ಹೇಳುತ್ತಿರುವ ನರೇಂದ್ರ ಮೋದಿ ಅವರಿಗೆ ಒಂದಿಷ್ಟು ಮರ್ಯಾದೆ ಇದ್ದರೆ, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಒತ್ತಾಯಿಸಿದ್ದಾರೆ.