ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ.15ರವರೆಗೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರ ಬಳಿ ಮನವಿ ಮಾಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ನಡೆದ ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ, ಮೇ.3ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ. ಮೇ.15ರವರೆಗೆ ಲಾಕ್ ಡೌನ್ ವಿಸ್ತರಿಸಿದರೆ ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆದರೆ, ಬಿಎಸ್ ವೈ ಮನವಿಗೆ ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ.
ಇನ್ನು ಕೇಂದ್ರದ ನಿರ್ಧಾರಗಳಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ಸೂಚಿಸಿದೆ. ಆದರೆ, ಸದ್ಯದ ಆರ್ಥಿಕ ಪರಿಸ್ಥಿತಿ ನಿಟ್ಟಿನಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಿಗೆ ಕೆಲವೊಂದು ವಿನಾಯಿತಿ ನೀಡುವಂತೆ ಪ್ರಧಾನಿ ಬಳಿ ಮನವಿ ಮಾಡಲಾಗಿದೆ.
ಇನ್ನು ಇಂದಿನ ವಿಡಿಯೋ ಸಂವಾದದಲ್ಲಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಮೇ.7 ರವರೆಗೆ ಲಾಕ್ ಡೌನ್ ವಿಸ್ತರಿಸುವಂತೆ ಸಲಹೆ ನೀಡಿದರು. ಇನ್ನು ಈಗಾಗಲೇ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮೇ.3 ರ ಬಳಿಕವೂ ಲಾಕ್ ಡೌನ್ ವಿಸ್ತರಣೆ ಮಾಡಿದರೆ ಒಳಿತು ಎಂಬ ಅಭಿಪ್ರಾಯವನ್ನು ಆಯಾ ರಾಜ್ಯಗಳು ವ್ಯಕ್ತಪಡಿಸಿವೆ.








