ಚಿಕ್ಕಮಗಳೂರು: ರಸ್ತೆಯಲ್ಲಿ ಜಿಂಕೆ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಗೊಂಡಿರುವ ಘಟನೆ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಈ ಘಟನೆ ಕಳಸದ (Kalasa) ಸಂಪಿಖಾನ್ ಹತ್ತಿರ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಲಿಸುತ್ತಿದ್ದ ಸಂದರ್ಭದಲ್ಲಿ ಹಠಾತ್ ಆಗಿ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಂಕೆ ಬಂದಿದೆ. ಈ ಸಂದರ್ಭದಲ್ಲಿ ಕಾರು ಚಾಲಕ ಜಿಂಕೆಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸಲು ತಕ್ಷಣವೇ ಬ್ರೇಕ್ ಹಾಕಿದ್ದಾನೆ.
ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿಯಾಗಿದೆ. ಕೂಡಲೇ ಕಾರಿನಲ್ಲಿದ್ದ ಮೂವರಿಗೆ ಕಳಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಮಣಿಪಾಲ್ ಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದು ಮಂಗಳೂರಿಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ.