ಎರಡು ವರ್ಷದ ಮಗು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಸಾವನ್ನಪ್ಪಿದ ಮಗು ಎನ್ನಲಾಗಿದೆ. ಜಗದೀಶ್ ಬಿಎಂಆರ್ ಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಮೊದಲನೇ ಮಹಡಿಯಲ್ಲಿ ಮಗು ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಿದೆ. ಕೂಡಲೇ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.