ಇಸ್ತಾಂಬುಲ್: ನಗರದಲ್ಲಿನ 16 ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದ್ದು, ಕನಿಷ್ಠ 29 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮೊದಲು 10 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಸದ್ಯ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಲ್ಲಿನ ಗವರ್ನರ್ ದಾವುತ್ ಗುಲ್ ಹೇಳಿದ್ದಾರೆ.
ಬೆಂಕಿಯು ಮಧ್ಯಾಹ್ನ ಕಾಣಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. 2ನೇ ಮಹಡಿ ನಿರ್ಮಾಣ ಕಾರ್ಯದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ದುರಂತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.
ಈ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಈಗಾಗಲೇ ಐವರನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಸ್ತಾನ್ ಬುಲ್ ನ ಮೇಯರ್ ಎಕ್ರೆಮ್ ಇಮಾಮೊಗ್ಲು ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.