ಆನೇಕಲ್ನ ಪಟಾಕಿ ಗೋಡಾನ್ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅತ್ತಿಬೆಲೆಯ ಪಟಾಕಿ ಗೋಡಾನ್ನಲ್ಲಿ ಲಾರಿಯಿಂದ ಪಟಾಕಿ ಇಳಿಸುವ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗೋಡಾನ್ನಲ್ಲಿ 20 ಜನರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ದುರಂತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಿದ್ದರಾಮಯ್ಯ ಟ್ವೀಟ್ನಲ್ಲಿ, ‘ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಸ್ಥಳಕ್ಕೆ ನಾಳೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಶನಿವಾರ ಟ್ವೀಟ್ನಲ್ಲಿ ತಿಳಿಸಿದ್ದಾರೆ.