ನೆಲಮಂಗಲ: ಸ್ನೇಹಿತನಿಗಾಗಿ ಕಾಯುತ್ತ ನಿಂತಿದ್ದ ಯುವಕನಿಗೆ ಐಷಾರಾಮಿ ಕಾರು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಬೈಕ್ (Bike) ನಿಲ್ಲಿಸಿಕೊಂಡು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಂದ್ರಹಳ್ಳಿಯ ಮಂಜುನಾಥ್(37)ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಎನ್ನಲಾಗಿದೆ.
ಮಂಜುನಾಥ್ ಅವರು ತಮ್ಮ ಸ್ನೇಹಿತ ಬಸವರಾಜ್ಗಾಗಿ ತೋಟದಗುಡ್ಡದಹಳ್ಳಿ ಬಸ್ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿಕೊಂಡು ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಕಾರು ಗುದ್ದಿದೆ. ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ, ಬಸ್ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಡಿಕ್ಕಿಹೊಡೆದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








