ಬೆಂಗಳೂರು : ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್. ಡಿ. ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿದೆ.
ಈ ಸಭೆಯಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್ ನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗಿಯಾಗಿದ್ದು, ಗೌಡರು ನಗರದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಎದುರಾಗಲಿರುವ ಬಿಬಿಎಂಪಿ ಚುನಾವಣೆ ಸಮಯಕ್ಕೆ ಪಕ್ಷ ಬಲಪಡಿಸಿಕೊಳ್ಳುವ ಹಾಗೂ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖಂಡರ ಜೊತೆ ಮಾತುಕತೆ ನಡೆಯುತ್ತಿದೆ.
ಕೊರೊನಾವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಬಿಬಿಎಂಪಿ ಸಂಪೂರ್ಣ ವಿಫಲವಾಗಿವೆ. ಆಡಳಿತವನ್ನು ಎಚ್ಚರಿಸುವ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಮಾಡಬೇಕಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಮುಖಂಡರು ಚುನಾವಣೆಗೆ ಸಜ್ಜಾಗುವ ಜೊತೆಗೆ ಮಹಾಮಾರಿ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಬೇಕು ಎಂದು ದೇವೇಗೌಡರು ಸಭೆಯಲ್ಲಿ ಕರೆ ಕೊಟ್ಟಿದ್ದಾರೆ ಎನ್ನಲಾಗ್ತಿದೆ.
ಒಟ್ಟಾರೆ ಕೆಲದಿನಗಳ ನಂತರ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನಕ್ಕೆ ದೊಡ್ಡಗೌಡರು ಆಗಮಿಸಿದ್ದು, ಮತ್ತೆ ಪಕ್ಷ ಸಂಘಟನೆ ಕಾರ್ಯಕ್ಕೆ ಕೈ ಹಾಕಿದ್ದಾರೆ.








