ಪಾಪಿ ಮಗನೊಬ್ಬ ತಾಯಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು. ಕೂಡಲೇ ಅಲ್ಲಿದ್ದವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ಆದರೆ, ಮಹಿಳೆಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ತಾಯಿ ಶೇ.80ರಷ್ಟು ಭಾಗ ಸುಟ್ಟು ಹೋಗಿದ್ದರು ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 45 ವರ್ಷದ ಮಹಿಳೆಯನ್ನು ಆಕೆಯ ಮಗನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆ ತನ್ನ ಮಗನೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದ್ದು ಪೊಲೀಸರ ಜತೆ ಮಾತುಕತೆ ನಡೆಸಿದ್ದನ್ನು ಕಾಣಬಹುದು. ಮಹಿಳೆಯೇ ಮೊದಲು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸರು ಲೈಟರ್ ಕಿತ್ತುಕೊಳ್ಳಲು ಹೋದಾಗ ಅದು ಕೆಳಗೆ ಬಿದ್ದಿತ್ತು, ಆಗ ಅದನ್ನು ತೆಗೆದುಕೊಂಡ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ.
ಮಹಿಳೆಯ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದನ್ನು ಬಗೆಹರಿಸಿಕೊಡಿ ಎಂದು ಕೇಳಲು ಪೊಲೀಸ್ ಠಾಣೆಗೆ ಹೋಗಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.