ಕೋಲಾರ: ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಕೋಲಾರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಈ ರೀತಿ ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯು ಶ್ರೀನಿವಾಸಪುರ ತಾಲೂಕಿನವಳು ಎನ್ನಲಾಗಿದೆ. ಸೋಮವಾರ ಹೊಟ್ಟೆನೋವಿನಿಂದಾಗಿ ಶೌಚಾಲಯಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಹೆಣ್ಣು ಮಗು ಜನನವಾಗಿದೆ. ಮಗುವಿನ ಅಳುವ ಸದ್ದು ಕೇಳಿ ಗಾಬರಿಗೊಂಡ ಕಾಲೇಜು ಸಿಬ್ಬಂದಿ ಸ್ಥಳಕ್ಕೆ ಓಡಿ ಬಂದಿದ್ದಾರೆ.
ಕೂಡಲೇ ಸಮೀಪದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ನಂತರ ಬಾಲಕಿಯ ಕಾಲೇಜಿನ ಸಿಬ್ಬಂದಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಆಗ ಪೋಷಕರ ಮನವಿ ಮೇರೆಗೆ ಬಾಲಕಿ ತನ್ನ ಫೇಸ್ ಬುಕ್ ಗೆಳೆಯನಿಂದ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಗಿ ಪೊಲೀಸರಿಗೆ ಹೇಳಿದ್ದಾಳೆ.
ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಮುಳಬಾಗಿಲು ಮೂಲದ ಯುವಕನನ್ನು ಬಂಧಿಸಿದ್ದಾರೆ. ಈ ಕುರಿತು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.