ಬಾಗಲಕೋಟೆ: ಟ್ರ್ಯಾಕ್ಟರ್ ಹಾಗೂ ಶಾಲಾ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ತಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 8ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ(13), ಬಸವರಾಜ (17) ಸಾವನ್ನಪ್ಪಿದ ವಿದ್ಯಾರ್ಥಿಗಳು ಎನ್ನಲಾಗಿದೆ.
ಸಾವನ್ನಪ್ಪಿದ ವಿದ್ಯಾರ್ಥಿಗಳು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಶಾಲಾ ಬಸ್ ತೆರಳಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.