ನ್ಯಾಯಾಂಗ ಸಂಕಷ್ಟದಲ್ಲಿ ನಟ ಚೇತನ – Saaksha Tv
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್ ಅವರು ಅರೆಸ್ಟ್ ಆಗಿದ್ದು, ಇದೀಗ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಹಿಜಾಬ್ ಕೇಸ್ ನ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿರುವುದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಮತ್ತೊಂದೆಡೆ ವಕೀಲ ಕೆ.ಬಾಲನ್ ಅವರು ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಚೇತನ್‌ಕುಮಾರ್ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.








