ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ ಸೀಮಿತವಾಗದೆ, ರಾಷ್ಟ್ರೀಯ ರಾಜಕಾರಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಉತ್ತರಾಧಿಕಾರಿಯಾಗಿ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ ಎಂದು ಶಿವಲಿಂಗೇಗೌಡ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯ ನಿವೃತ್ತರಾಗಲ್ಲ, ರಾಷ್ಟ್ರೀಯ ನಾಯಕರಾಗುತ್ತಾರೆ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅವರು ಕೇವಲ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರಬಹುದು. ಆದರೆ ಅವರು ರಾಜ್ಯಸಭೆಯ ಮೂಲಕ ಸಂಸತ್ ಪ್ರವೇಶಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗುವ ಅಥವಾ ಅದಕ್ಕಿಂತಲೂ ಪ್ರಬಲವಾದ ರಾಷ್ಟ್ರೀಯ ಜವಾಬ್ದಾರಿಯನ್ನು ಹೊರುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿಸಿದರು.
2028ರ ಚುನಾವಣೆಗೆ ಸಿದ್ದರಾಮಯ್ಯ ಅವರೇ ಸಾರಥಿ
ಮುಂದಿನ 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರ ಪಾತ್ರ ಪ್ರಮುಖವಾಗಿರುತ್ತದೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅವರು ಸಾರಥ್ಯ ವಹಿಸಬೇಕು ಎಂಬುದು ನಮ್ಮ ಆಸೆ. ಅವರು ಮತ್ತೆ ಚುನಾವಣಾ ಕಣಕ್ಕಿಳಿಯುವಂತೆ ನಾವೆಲ್ಲರೂ ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ ಎಂದು ಶಿವಲಿಂಗೇಗೌಡ ಹೇಳಿದರು.
ಸಚಿವ ಸಂಪುಟ ವಿಸ್ತರಣೆಯ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಶಿವಲಿಂಗೇಗೌಡರು, ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದ್ದು ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದೇನೆ. ಯಾವ ಜಿಲ್ಲೆಗೆ ಯಾವ ಸ್ಥಾನ ನೀಡಬೇಕು ಎಂಬುದು ವರಿಷ್ಠರ ನಿರ್ಧಾರ, ಆದರೆ ನನಗೆ ಜವಾಬ್ದಾರಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ತಮ್ಮ ಸಚಿವ ಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದರು.








