ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ, ಬಲವಂತವಾಗಿ ಗರ್ಭಪಾತ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶ್ರೀವಾಸ್ತವ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಸಂತ್ರಸ್ತ ಯುವತಿ ಕಳೆದ ಐದು ವರ್ಷಗಳಿಂದ ರಾಹುಲ್ ಶ್ರೀವಾಸ್ತವ ಅವರೊಂದಿಗೆ ಸಂಪರ್ಕದಲ್ಲಿದ್ದು, ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು. ಈ ವೇಳೆ ಪರಿಚಯವನ್ನೇ ದುರುಪಯೋಗ ಪಡಿಸಿಕೊಂಡಿರುವ ರಾಹುಲ್, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ವರ್ಷ ಬಲವಂತದಿಂದ ಗರ್ಭಪಾತ ಮಾಡಿಸಿದ್ದಾನೆ. ನನ್ನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾನೆ. ದೌರ್ಜನ್ಯ ನಡೆಸಿರುವ ಕುರಿತು ಸಾಕ್ಷ್ಯಾಧಾರಗಳು ನನ್ನ ಹತ್ತಿರ ಇವೆ ಎಂದು ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾರೆ.
ಕ್ರಮ ಕೈಗೊಳ್ಳುವಂತೆ ಕಳೆದ ಎರಡ್ಮೂರು ತಿಂಗಳಿಂದ ಒತ್ತಾಯಿಸುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಳ್ಳುತ್ತಿದ್ದಂತೆ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.








