ದೆಹಲಿ: ಏಪ್ರಿಲ್ 14ರ ನಂತರ ದೇಶದಲ್ಲಿ ಲಾಕ್ ಡೌನ್ ಮುಂದುವರಿಯುತ್ತಾ ಎಂಬ ಪ್ರಶ್ನೆ ಸದ್ಯ ದೇಶದ ಜನತೆಯಲ್ಲಿ ಕಾಡುತ್ತಿದೆ. ಈ ಪ್ರಶ್ನೆಗೆ ಉತ್ತರದ ಜೊತೆ ಲಾಕ್ ಡೌನ್ ಸಡಿಲಿಕೆಗೆ ಸಂಬಂಧಿಸಿದ ಪರ್ಯಾಯ ಕ್ರಮಗಳನ್ನು ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ರಾಜ್ಯಗಳ ಸಿಎಂಗೆ ತಿಳಿಸಿದ್ದರು. ಇದರ ಬೆನ್ನಲ್ಲೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರಿಸಬೇಕು ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ. ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ರಾಜಸ್ತಾನದ ಸಿಎಂ ಅಶೋಕ್ ಗೆಹ್ಲೋಟ್, ತೆಲಂಗಾಣದ ಸಿಎಂ ಕೆ.ಚಂದ್ರಶೇಖರ್ ರಾವ್ ಲಾಕ್ ಡೌನ್ ಮುಂದುವರಿಸಬೇಕು ಎಂದು ಕಡ್ಡಿಮುರಿದಂತೆ ಹೇಳಿದ್ದಾರಂತೆ. ಒಂದು ವೇಳೆ ಲಾಕ್ ಡೌನ್ ತೆಗೆಯುವುದಾದರೆ ಮೂರು ಹಂತಗಳಲ್ಲಿ ಸಡಿಲಗೊಳಿಸಿ ಎಂದು ವಿನಂತಿಸಿದ್ದಾರೆ.
ಇನ್ನೂ ಹೀಗೇ ರಾಜ್ಯಗಳ ಮುಖ್ಯಮಂತ್ರಿಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸುವುದರ ಬಗ್ಗೆ ಯೋಚಿಸುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಪ್ರಸಾರ ಮಾಡಿವೆ.
ಸರ್ವಪಕ್ಷಗಳ ಸಭೆಯಲ್ಲಿ ನಿರ್ಧಾರ ಸಾಧ್ಯತೆ!
ಲಾಕ್ ಡೌನ್ ಮುಂದುವರಿಸುವ ಬಗ್ಗೆ ಇವತ್ತು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಂಸದರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ನ ವಿಸ್ತರಣೆ ಹಾಗೂ ಕ್ಷೇತ್ರವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.








