ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Liquor Policy Case) ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರ ಬರುತ್ತಿದ್ದಂತೆ ಸದ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯೊಂದಿಗೆ ದೆಹಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಆ ನಂತರ ಸಚಿವ ಸಂಪುಟ ಸಭೆಯಲ್ಲಿ ಪಕ್ಷದ ಸದಸ್ಯರೊಬ್ಬರನ್ನು ಮುಖ್ಯಮಂತ್ರಿಯಾಗಿ ಹೆಸರಿಸಲಾಗುವುದು. ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ಮತ್ತೆ ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ಹೇಳಿದ್ದಾರೆ.
ನಾನು ಜೈಲಿನಲ್ಲಿದ್ದಾಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನನ್ನ ಅನುಪಸ್ಥಿತಿಯಲ್ಲಿ ಅತಿಶಿ ಅವರಿಂದ ಧ್ವಜಾರೋಹಣಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಆದರೆ, ಅವರು ಹಿಂದುರಿಗಿಸಿದರು. ನನ್ನ ಕುಟುಂಬ ಭೇಟಿ ಮಾಡಬೇಕೆಂದು ಮತ್ತೊಂದು ಪತ್ರ ಬರೆದೆ. ಅದನ್ನೂ ತಿರಸ್ಕರಿಸಲಾಯಿತು ಎಂದು ಹೇಳಿದ್ದಾರೆ.