ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ಧರಣಿ ಆರಂಭಿಸಿದ್ದಾರೆ.
ಕಳೆದ 20 ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜಧಾನಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಧರಣಿ ಆರಂಭಿಸಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಹೊರಟ ಆಶಾ ಕಾರ್ಯಕರ್ತೆಯರನ್ನು ಪೊಲೀಸರು ಮೌರ್ಯವೃತ್ತದಲ್ಲಿ ತಡೆದರು. ಹೀಗಾಗಿ ಮೌರ್ಯ ವೃತ್ತದಲ್ಲೇ ಧರಣಿ ಮುಂದುವರೆಸಿದ್ದಾರೆ.
ಬೆಂಗಳೂರು, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಕೆಲ ಜಿಲ್ಲೆಗಳ ನೂರಾರು ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದಾರೆ. ಬೆಂಗಳೂರಿಗೆ ದೂರ ಇರುವ ಜಿಲ್ಲೆಗಳ ಕಾರ್ಯಕರ್ತರು ಕೊರೊನಾ ಕಾರಣಕ್ಕಾಗಿ ಆಯಾ ಜಿಲ್ಲೆಗಳಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದ 20 ದಿನಗಳ ಹಿಂದೆಯೇ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಈ ಹಿಂದೆ ನೀಡಿದ ಭರವಸೆಗಳು ಹುಸಿಯಾಗಿವೆ. ಹಾಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಇಂತಿವೆ…
1. ಮಾಸಿಕ ಗೌರವ ಧನ 12 ಸಾವಿರಕ್ಕೆ ಏರಿಸಬೇಕು
2. ಕೋವಿಡ್ ಕೆಲಸಕ್ಕೆ ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ನೀಡಬೇಕು
3. ಕೆಲಸ ಮಾಡುವ ವೇಳೆ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಒದಗಿಸಬೇಕು







