ಅಸ್ಸಾಂ ಪ್ರವಾಹ – 26 ಜಿಲ್ಲೆಗಳಲ್ಲಿ ಪ್ರವಾಹ, ಭೂ ಕುಸಿತ, 4 ಲಕ್ಷ ಜನ ಸಂತ್ರಸ್ತರು…
ಅಸ್ಸಾಂನಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಆಡಳಿತಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿವೆ.
26 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದರೆ, ಎಂಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 40 ಸಾವಿರ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ದಿಮಾ ಹಸಾವೊ, ಹೊಜೈ ಮತ್ತು ಬರಾಕ್ ಕಣಿವೆಗಳು ಹೆಚ್ಚು ಹಾನಿಗೊಳಗಾಗಿವೆ.
ದಕ್ಷಿಣ ಅಸ್ಸಾಂನಲ್ಲಿ ರೈಲು ಸಂಪರ್ಕವನ್ನು ಮರುಸ್ಥಾಪಿಸಲು ಈಶಾನ್ಯ ಫ್ರಾಂಟಿಯರ್ ರೈಲ್ವೆ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ದಿಮಾ ಹಸಾವೊ ಜಿಲ್ಲೆಯಲ್ಲಿ 50 ರಿಂದ 60 ಸ್ಥಳಗಳಲ್ಲಿ ಹಾನಿ ಸಂಭವಿಸಿದೆ ಎಂದು ಈಶಾನ್ಯ ಗಡಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಡೇ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಅಸ್ಸಾಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಲು ಮಾತನಾಡಿದರು. ಈಗಾಗಲೇ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಮಿತ್ಚ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.