ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಆಗಾಗ ಊಸರವಳ್ಳಿಯಂತೆ ಬಣ್ಣಬದಲಾಯಿಸುತ್ತಿರುತ್ತಾರೆ. ಮುಖ್ಯಮಂತ್ರಿಯಾಗಿದ್ದವರು ಅವರು, ಜವಾಬ್ದಾರಿಯಿಂದ ಮಾತನಾಡಬೇಕು ಎಂಬ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್, ಬಿ.ಸಿ.ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಬಿ.ಸಿ ಪಾಟೀಲ್ ರ ಹೇಳಿಕೆ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಡ್ರಗ್ಸ್ ಮಾಫಿಯಾದಲ್ಲಿ ಬಿಜೆಪಿಯ ಜೊತೆಗೆ ಅಂತರಂಗ, ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ. ಅಧಿಕಾರದ ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಉಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಸಿದ್ದಾರೆ.
ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಬೇಕಾಗಿಲ್ಲ ಎಂಬ ಉಡಾಫೆಯ ಪ್ರತಿಕ್ರಿಯೆ ನೀಡುತ್ತಿರುವ ಬಿ.ಸಿ.ಪಾಟೀಲರು ನಿಜವಾದ ಊಸರವಳ್ಳಿ ಎಂದು ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.