ಭಜರಂಗದಳ ಕಾರ್ಯಕರ್ತನ ಹತ್ಯೆ | 144 ಸೆಕ್ಷನ್ ಜಾರಿ Saaksha Tv
ಶಿವಮೊಗ್ಗ: ಗುಂಪೊಂದು ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ.
22 ವರ್ಷದ ಹರ್ಷ ಮೃತದುರ್ದೈವಿ. ತಡರಾತ್ರಿ ಕಾಮತ್ ಪೆಟ್ರೋಲ್ ಬಂಕ್ ಬಳಿ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತ ಹರ್ಷ ಭಜರಂಗದಳ ಕಾರ್ಯಕರ್ತನಾಗಿದ್ದು, ವೈಯಕ್ತಿ ದ್ವೇಷದಿಂದ ಕೊಲೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ತಡರಾತ್ರಿ ಹರ್ಷ ಪೆಟ್ರೋಲ್ ಬಂಕ್ ಬಳಿ ನಿಂತಾಗ, ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹರ್ಷ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಇದೀಗ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ಯುವಕನ ಸಹೋದರಿ ನನ್ನ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕ್ರೂರಿಗಳ ರೀತಿ ವರ್ತಿಸಿದ್ದಾರೆ. ನನ್ನ ತಮ್ಮನ ಸಾವಿಗೆ ನ್ಯಾಯ ಕೊಡಿಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಗೋಳಾಡಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಗುಂಪುಗೂಡಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಮನೆಯತ್ತ ವಾಪಸ್ ಕಳುಹಿಸಿದ್ದಾರೆ. ಮತ್ತು ಮುಂಜಾಗ್ರತಾ ಕ್ರಮವಾಗಿ ತಕ್ಷಣದಿಂದಲೇ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದ ಹಲವು ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸದ್ಯ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









