ಚಾಮರಾಜನಗರ: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ,ಪೊಲೀಸರ ಮೇಲೆ ದೌರ್ಜನ್ಯ ಎಸಗಿ, ವಾಹನಗಳನ್ನು ಜಖಂಗೊಳಿಸಿರುವ ಗುಂಡಾಗಳನ್ನು ಬಂಧಿಸಿ,ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಇಂದು ನಗರದಲ್ಲಿ ಹಿಂದೂ ಜನ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಾಲಯದ ಎದುರು ಜಮಾಯಿಸಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತ ತಲುಪಿ, ಅಲ್ಲಿ ಮಾನವ ಸರಪಳಿ ರಚಿಸಿ ಕೆಲ ಕಾಲ ರಸ್ತೆ ಸಂಚಾರ ತಡೆ ನಡೆಸಿ, ಡಿಜೆ ಹಳ್ಳಿ ಗೂಂಡಾಗಳ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು.
ಬೆಂಗಳೂರಿನ ಡಿಜೆ ಹಳ್ಳಿ ಪ್ರಕರಣ ವರದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಗಳ ಪ್ರತಿನಿಧಿಗಳ ಮೇಲೆ ಗುಂಡಾಗಳು ಹಲ್ಲೆ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದಾರೆ. ಜೊತೆಗೆ ಪೊಲೀಸರ ಮೇಲು ದೌರ್ಜನ್ಯ ನಡೆಸಿದ್ದಾರೆ.
ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತು ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣೆ ನೀಡಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವವರನ್ನು ಕೂಡಲೇ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವ ಜೊತೆಗೆ ಎಸ್ಡಿಪಿಐ ಸಂಘಟನೆಯನ್ನು ನಿಷೇಧಿಸ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.








