ಬೆಂಗಳೂರು : ಡಿ.ಜೆ.ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಾಟೆ ನಡೆದ ಪ್ರದೇಶಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಶಾಸಕ ಅಖಂಡ ಶ್ರೀನಿವಾಸ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಸುಟ್ಟು ಹೋದ ಮನೆ ಪರಿಶೀಲನೆ ಮಾಡಿ ನಂತರ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ವೇಳೆ ಗಲಭೆಗೆ ಸಂಬಂಧಿಸಿದಂತೆ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್ ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ.
ಒಂದು ವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್ ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ. ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ.
ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.








