ಪರಿಹಾರ ಕಾರ್ಯಗಳಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ : ಬೊಮ್ಮಾಯಿ
ಬೆಂಗಳೂರು : ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲು ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದ ಬೆಳೆ ಹಾನಿ, ಜೀವಹಾನಿಯಾಗಿರುವ ಮಾಹಿತಿ ಬಂದಿದೆ.
ತಕ್ಷಣ ಸಮೀಕ್ಷೆ ನಡೆಸಿ ಹಾನಿ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ. ಅದರಂತೆ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಕೆಲವೆಡೆ ಮಳೆ ಮುಂದುವರೆದಿರುವುದರಿಂದ ಸಮೀಕ್ಷೆ ಸಾಧ್ಯವಾಗುತ್ತಿಲ್ಲ.
ಕೆಲವೆಡೆ ಪ್ರಾಥಮಿಕ ಸಮೀಕ್ಷೆ ನಡೆಸಿ ಆ ಕುರಿತ ಮಾಹಿತಿಯನ್ನು ಪರಿಹಾರ ಪೆÇೀರ್ಟಲ್ ಗೆ ಅಪ್ ಲೋಡ್ ಮಾಡಲಾಗಿದೆ.
ಇಂದು ಸಂಜೆ ಅಧಿಕಾರಿಗಳೊಂದಿಗೆ ಸೇರಿ ಬಂದಿರುವ ಎಲ್ಲಾ ವರದಿಗಳನ್ನು ಪರಿಶೀಲಿಸಲಾಗುವುದು. ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು ಎಂದರು.
ಪರಿಹಾರ ಕಾರ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗಿದೆ. ಹೀಗಾಗಿ ಮಳೆ ಹಾನಿ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆ ನಡೆಸಲು ಅನುಮತಿ ನೀಡುವಂತೆ ಚುನಾವಣ ಆಯೋಗವನ್ನು ಮನವಿ ಮಾಡಿದ್ದೇನೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಕುರಿತು ಆಯೋಗಕ್ಕೆ ಪತ್ರ ಬರೆಯಲಿದ್ದಾರೆ ಎಂದು ಸಿಎಂ ತಿಳಿಸಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಮಳೆಹಾನಿ ಬಗ್ಗೆ ಗಮನಹರಿಸದಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಹಲವಾರು ಸಚಿವರು ಆಯಾ ಜಿಲ್ಲೆಗಳಲ್ಲಿ ಇದ್ದಾರೆ.
ಉಳಿದ ಸಚಿವರು ಇಂದಿನಿಂದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.