Basavaraja Bommai | ಪೊಲೀಸರಿಗೆ ಆಧುನಿಕ ಶಸ್ತ್ರಾಸ್ತ್ರ ಅಗತ್ಯ
ಬೆಂಗಳೂರು : ಇಂದು ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಬೆಂಗಳೂರಿನ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.
ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ಅನೇಕ ಸಂದರ್ಭಗಳಲ್ಲಿ ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಅಪರಾಧ ಘಟಿಸಿದ ನಂತರ ಅದರ ನಿಯಂತ್ರಣಕ್ಕಾಗಿ ಕಾನೂನು ರೂಪುಗೊಳ್ಳುತ್ತದೆ.
ಆದರೆ ಇಂಥ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನನ್ನು ಮುಂಚಿತವಾಗಿಯೇ ರೂಪಿಸುವ ಅಗತ್ಯವಿದೆ ಎಂದರು.

ಪೊಲೀಸರಿಗೆ ಆಧುನಿಕ ಶಸ್ತ್ರಾಸ್ತ್ರದ ಅಗತ್ಯವಿದ್ದು, ಹಿರಿಯ ಅಧಿಕಾರಿಗಳು ಹೆಚ್ಚು ದಕ್ಷರಾಗಿ ಕಾರ್ಯ ನಿರ್ವಹಿಸಿದರೆ ಕೆಳ ಹಂತದ ಅಧಿಕಾರಿಗಳ ಮೇಲೆ ಪರಿಣಾಮ ಬೀರುತ್ತದೆ.
ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ತಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಪೊಲೀಸ್ ನೇಮಕಾತಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರತಿ ವರ್ಷ ನಾಲ್ಕುರಿಂದ ಐದು ಸಾವಿರ ಪೊಲೀಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪೊಲೀಸರ ವಿಶ್ವಾಸಾರ್ಹತೆ ಹೆಚ್ಚಬೇಕಿದೆ.
ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ತರಬೇತಿ ನೀಡುವ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.