2023ರ ಏಕದಿನ ವಿಶ್ವಕಪ್ ಟೂರ್ನಿಗೆ ರೋಹಿತ್ ಶರ್ಮಾ ನೇತೃತ್ವದ 15 ಜನ ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಸಾರಥ್ಯದಲ್ಲಿ ತಂಡ ಪ್ರಕಟಿಸಲಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ (KL Rahul), ಶ್ರೇಯಸ್ ಅಯ್ಯರ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಏಕದಿನ ಸರಣಿ ಹಾಗೂ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ಜವಾಬ್ದಾರಿಯುತ ಅರ್ಧಶತಕ ಬಾರಿಸಿದ ಯುವ ಆಟಗಾರ ಇಶಾನ್ ಕಿಶನ್ ಸಹ ಸ್ಥಾನ ಪಡೆದುಕೊಂಡಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನ ತಂಡದಿಂದ ಕೈಬಿಡಲಾಗಿದ್ದು, ಸೂರ್ಯಕುಮಾರ್ ಯಾದವ್ ಅವಕಾಶ ಪಡೆದಿದ್ದಾರೆ.
ಏಷ್ಯಾ ಕಪ್ 2023 ಟೂರ್ನಿಯಲ್ಲಿ ಫಿಟ್ನೆಸ್ ಸಮಸ್ಯೆ ಎದುರಿಸಿದ್ದ ಕೆಎಲ್ ರಾಹುಲ್ ಅವರು ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಆದರೆ ವಿಶ್ವಕಪ್ ಆಡಲು ರಾಹುಲ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ತಿಳಿಸಿದ್ದಾರೆ.
ಕೆಎಲ್ ರಾಹುಲ್ ಅವರಂತಹ ಅನುಭವಿ ಆಟಗಾರರ ಸಂಪೂರ್ಣ ಫಿಟ್ ಆಗಿರುವುದು ಭಾರತ ತಂಡದ ಪಾಲಿಗೆ ಶುಭಸುದ್ದಿ. ದುರದೃಷ್ಟವಶಾತ್ ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಕಾರಣ ಅವರು ಏಷ್ಯಾ ಕಪ್ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿಲ್ಲ. ಇವೆಲ್ಲವನ್ನೂ ಪರಿಗಣಿಸಿ ಅವರನ್ನ ವಿಶ್ವಕಪ್‌ಗೆ ಆಯ್ಕೆ ಮಾಡಲಾಗಿದೆ ಎಂದು ಅಗರ್ಕರ್ ಹೇಳಿದ್ದಾರೆ.
ಭಾರತ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.








