Bengaluru : ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ವೀಕ್ಷಣೆಗೆ ಪ್ರವೇಶ ಶುಲ್ಕವಿಲ್ಲ
ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಈ ಬೃಹತ್ ಕಂಚಿನ ಪ್ರತಿಮೆಗೆ ಕರ್ನಾಟಕ ಸರ್ಕಾರ ‘ಪ್ರಗತಿಯ ಪ್ರತಿಮೆ’ ಎಂದು ನಾಮಕರಣ ಮಾಡಿದೆ.
ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರ ಶುಕ್ರವಾರ ಅನಾವರಣಗೊಳಿಸಿದ್ದಾರೆ.
ಕೆಂಪೇಗೌಡರ ಪ್ರಗತಿಯ ಪ್ರತಿಮೆಯ ಕೆಳಗೆ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಇದರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈಗಾಗಲೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ, ನಗರವನ್ನು ನಿರ್ಮಾಣ ಮಾಡಿದವರ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಪ್ರತಿದಿನ ಸಾವಿರಾರು ಜನರು ಇದನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ.
ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ. ಎನ್. ಅಶ್ವಥ ನಾರಾಯಣ್, ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಕೆಂಪೇಗೌಡ ಪ್ರತಿಮೆಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಂಪೇಗೌಡರ 108 ಅಡಿ ಕಂಚಿನ ಪ್ರಗತಿಯ ಪ್ರತಿಮೆಯನ್ನು ವೀಕ್ಷಿಸಲು ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ಯಾವುದೇ ಶುಲ್ಕ ವಿಧಿಸಿಲ್ಲ ಮತ್ತು ಶೀಘ್ರದಲ್ಲೇ ಪ್ರವಾಸಿಗರಿಗೆ ಮತ್ತಷ್ಟು ಸೂಕ್ತ ಸೌಲಭ್ಯವನ್ನು ಕಲ್ಪಿಸಲಾಗುವುದು. ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.