ಬೆಂಗಳೂರು : ಕೆಜಿ ಹಳ್ಳಿಯ ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ, “ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ.”
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂಪುಷ್ಟಿ ನೀಡಿದೆ.ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ.ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ.
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಕೊನೆಯ ಟ್ವೀಟ್ ನಲ್ಲಿ “ದಯವಿಲ್ಲದ ಧರ್ಮವಾವುದಯ್ಯಾ..? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ.
ದಯವೇ ಧರ್ಮದ ಮೂಲವಯ್ಯಾ.. ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ವಚನವನ್ನು ಬರೆದುಕೊಂಡಿದ್ದಾರೆ.








