ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ
ಬೆಂಗಳೂರು : ವಿವಾದಿತ ಗೋಹತ್ಯೆ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಮಂಡಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆಯ ನಡುವೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದಾರೆ.
ಸಚಿವರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಮಂಡಿಸಲು ಮುಂದಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎದ್ದು ನಿಂತು ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಿದ ವಿಧೇಯಕಗಳನ್ನು ಮಾತ್ರ ಮಂಡಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಏಕಾಏಕಿ ಗೋಹತ್ಯೆ ನಿಷೇಧ ವಿಧೇಯಕ ತಂದಿದ್ದೀರಿ ಎಂದು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಅಲ್ಲದೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಸದಸ್ಯರೂ ಕೂಡ ಸಾಥ್ ನೀಡಿದ್ರು. ಆದ್ರೆ ವಿಪಕ್ಷಗಳ ವಿರೋಧದ ಮಧ್ಯೆ ಸಚಿವರು ಮಸೂದೆ ಮಂಡನೆ ಮಾಡಿದ್ರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರ ನಡೆಯನ್ನು ಬಿಜೆಪಿ ಶಾಸಕರು ಖಂಡಿಸಿದರು. ಕಾಂಗ್ರೆಸ್ ಶಾಸಕರು ಮಸೂದೆ ವಿರುದ್ಧ ಘೋಷಣೆ ಕೂಗಿದ್ರೆ, ಬಿಜೆಪಿ ಶಾಸಕರೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.
ಇದೇ ವೇಳೆ ಮತ್ತಷ್ಟು ಗರಂ ಆದ ಸಿದ್ದರಾಮಯ್ಯ ನಾವು ಯಾವುದೇ ಬಿಎಸಿ ಸಭೆಗೆ ಇನ್ನು ಮುಂದೆ ಬರುವುದಿಲ್ಲ ಎಂದು ಕಿಡಿಕಾರಿದರು.
ಈ ವೇಳೆ ಸ್ಪೀಕರ್ ಕಾಗೇರಿ, ಮಹತ್ವದ ವಿಧೇಯಕಗಳನ್ನು ಮಂಡಿಸಲು ಅವಕಾಶ ನೀಡುವುದಾಗಿ ಬಿಎಸಿಯಲ್ಲಿ ಹೇಳಿದ್ದೆ. ಅದರಂತೆ ಗೋಹತ್ಯೆ ನಿಷೇಧ ಮಸೂದೆ ಮಂಡಿಸಲು ಅವಕಾಶ ನೀಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









