ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಪಂಚಭೂತಗಳಲ್ಲಿ ಲೀನ…
ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಪಂಚ ಭೂತಗಳಲ್ಲಿ ಲೀನರಾಗಿದ್ದಾರೆ. ಹಿಂದೂ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಕೈಗೊಳ್ಳಲಾಗಿದೆ.
ಮರಣೋತ್ತರ ಪರೀಕ್ಷೆಯ ಬಳಿಕ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗೃಹಕ್ಕೆ ತರಲಾಗಿತ್ತು. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು, ಸಂಘಪರಿವಾರದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಹೊಸ ಮನೆಯನ್ನ ಕಟ್ಟಿಸಬೇಕು ಎಂದು ಸಮತಟ್ಟು ಮಾಡಿದ್ದ ಜಾಗದಲ್ಲಿಯೇ ಪ್ರವೀಣ್ ನೆಟ್ಟಾರು ಅವರನ್ನ ಕುಟುಂಬಸ್ಥರು ಅಂತ್ಯಕ್ರಿಯೇ ಮಾಡಿದ್ದಾರೆ. ಮಂತ್ರ ಪಠಣದ ಬಳಿಕ ಮನೆ ಸಮೀಪದಲ್ಲೇ ಪ್ರವೀಣ್ ಚಿತೆಗೆ ಮೂವರು ಮಾವಂದಿರಾದ ಶೀನಪ್ಪ ಪೂಜಾರಿ, ಲಿಂಗಪ್ಪ ಪೂಜಾರಿ, ಲೋಕೇಶ್ ಪೂಜಾರಿ ಅಗ್ನಿ ಸ್ಪರ್ಶ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರವೀಣ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು ಜೊತೆಗೆ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿದ್ರು. ನಿನ್ನೆ ಮಂಗಳವಾರ ರಾತ್ರಿ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಬೈಕಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.








