ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಮತ್ತು ಗಲಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಲಭೆಗೆ ಕಾರಣರಾದವರೇ ಬಿಜೆಪಿ ಎಂದು ಅವರು ಆರೋಪಿಸಿದ್ದಾರೆ.
.ಸಿಎಂ ಪ್ರತಿಕ್ರಿಯೆ
ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯು ಮಸೀದಿ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಅವರು ಘಟನೆಯನ್ನು ಖಂಡಿಸಿ, ಈಗಾಗಲೇ 21 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ತಪ್ಪಿತಸ್ಥರು ಯಾವುದೇ ಸಮುದಾಯದವರಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಿಜೆಪಿ ವಿರುದ್ಧ ಸಿಎಂ ಗರಂ
ಈ ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತರು ಪೊಲೀಸರ ಲಾಠಿಚಾರ್ಜ್ ವಿರೋಧಿಸಿ ಮತ್ತು ಪೊಲೀಸರ ಅಮಾನತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. “ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಸಮಾಜದಲ್ಲಿ ನೆಮ್ಮದಿ ಕೆಡಿಸಿದ್ದೇ ಬಿಜೆಪಿಯವರು” ಎಂದು ಅವರು ನೇರವಾಗಿ ಆರೋಪಿಸಿದರು.
ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಅವರು, “ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಕಲ್ಲು ತೂರಾಟ ನಡೆದು ಗಲಭೆ ಮಾಡಲು ಪ್ರಯತ್ನಿಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದರು. ಅಲ್ಲದೆ, “ಬಿಜೆಪಿಯವರು ಪ್ರಚೋದನೆ ಮಾಡುವುದರಲ್ಲಿ ಮತ್ತು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು” ಎಂದು ಟೀಕಿಸಿದರು.








