ಬೆಂಗಳೂರು : ಕಾಂಗ್ರೆಸ್ (Congress) ಯುವ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಸಾಗಿದ್ದ ಭಾರತ್ ಜೋಡೋ ಯಾತ್ರೆ (Bharat Jodo Yatra) ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಪರಿಣಾಮ ಬೀರಿದೆ. ಈ ಯಾತ್ರೆ ಸಾಗಿದ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಸೋಲು ಕಂಡಿವೆ.
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ದೇಶದ ನಾನಾ ರಾಜ್ಯಗಳಲ್ಲಿ ಸಂಚರಿಸಿದೆ. ಕರ್ನಾಟಕದಲ್ಲಿ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಯಚೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಯಾತ್ರೆ ಸಂಚರಿಸಿತ್ತು. ಪರಿಣಾಮವಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸುವಂತಾಗಿದೆ. ಭಾರತ್ ಜೋಡೋ ಯಾತ್ರೆ ಸಾಗಿದ ಹಿನ್ನೆಲೆಯ ಲಾಭ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ ಕ್ಷೇತ್ರ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ, ಮೈಸೂರಿನ ನರಸಿಂಹರಾಜ ಹಾಗೂ ವರುಣಾ ಕ್ಷೇತ್ರ, ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿದ್ದರು. ಈ ಬಾರಿಯೂ ಅವರು ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ನಗರದಲ್ಲಿ ಬಿಜೆಪಿ ಗೆದ್ದಿದ್ದರೆ, ಈ ಬಾರಿ ಕಾಂಗ್ರೆಸ್ ಗೆಲುವಿನ ಬಾವುಟ ಹಾರಿಸಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಆ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ನಂಜನಗೂಡು ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಗೆದ್ದಿದೆ.
ಭಾರತ್ ಜೋಡೋ ಯಾತ್ರೆ ಪಯಣಿಸಿದ ಇಪ್ಪತ್ತು ಕ್ಷೇತ್ರಗಳಲ್ಲಿ 2018ರಲ್ಲಿ ಕಾಂಗ್ರೆಸ್ 5, ಜೆಡಿಎಸ್ 6 ಹಾಗೂ ಬಿಜೆಪಿ 9 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. 2023ರಲ್ಲಿ ಕಾಂಗ್ರೆಸ್ 15, ಜೆಡಿಎಸ್ 3 ಹಾಗೂ ಬಿಜೆಪಿ 2 ಸ್ಥಾನಗಳನ್ನು ವಶಕ್ಕೆ ಪಡೆದಿದೆ.