ವಿಜಯಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾತನಾಡಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮದು ಹರಕುಬಾಯಿ ಎಂದಿರುವ ಸಚಿವ ಈಶ್ವರಪ್ಪ ವಿರುದ್ಧವೇ ಕಿಡಿಕಾರಿದ್ದಾರೆ.
ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಸಂಬಂಧ ಬರೆದುಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಹರಕು ಬಾಯಿ ಯಾರದ್ದು ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ನನ್ನನ್ನು ಮೊದಲು ಪಕ್ಷದಿಂದ ಉಚ್ಛಾಟನೆ ಮಾಡುವುದಾದರೆ ಮೊದಲು ನಿಮ್ಮನ್ನು ಉಚ್ಚಾಟನೆ ಮಾಡಬೇಕು. ಯಾಕಂದ್ರೆ ರಾಯಣ್ಣ ಬ್ರಿಗೇಡ್ ಮಾಡಿದ್ದು ಮರೆತು ಹೋಯಿತಾ ಈಶ್ವರಪ್ಪನವರೇ ಎಂದು ತಿರುಗೇಟು ನೀಡಿದ್ದಾರೆ.

ಸಿಎಂ ಯಡಿಯೂರಪ್ಪ ಅನುದಾನವನ್ನು ತಮ್ಮ ಶಿಕಾರಿಪುರ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರ ವಿರುದ್ಧ ಬಿಜೆಪಿ ಹೈಕಮಾಂಡ್‍ಗೆ ಬೇಸರವಿದೆ, ಸದ್ಯದಲ್ಲೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಿದ್ದಾರೆ. ಉತ್ತರ ಕರ್ನಾಟಕ ನಾಯಕರೊಬ್ಬರು ಸಿಎಂ ಹುದ್ದೆ ಏರುವುದು ಪಕ್ಕಾ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸಭೆಯೊಂದರಲ್ಲಿ ಮಾತನಾಡಿದ್ದರು.
ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಕೆಲ ಶಾಸಕರು ಅಸಮಾಧಾನ ಹೊರಹಾಕಿದ್ದರು. ನಿನ್ನೆ ಕೊಪ್ಪಳದಲ್ಲಿ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಹರಕುಬಾಯಿ ಯತ್ನಾಳ್‍ರನ್ನ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ನೋಟಿಸ್ ಕೊಡುವ ಅಗತ್ಯವೂ ಇಲ್ಲ ಎಂದಿದ್ದರು.
ಈಶ್ವರಪ್ಪ ಹೇಳಿಕೆಗೆ ಕೇರ್ ಮಾಡದ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿರುವುದು ಬಿಜೆಪಿ ಆಂತರಿಕ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








