ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರನ್ನು ನಾಮನಿರ್ದೇಶನ ಮಾಡಿದೆ. ಆ ಮೂಲಕ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರು ರಾಜ್ಯಸಭೆಗೆ ಪ್ರವೇಶ ಪಡೆದಿದ್ದಾರೆ.
ರಾಯಚೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿರುವ ಅಶೋಕ್ ಗಸ್ತಿ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ರಾಯಣ್ಣ ಬ್ರಿಗೇಡ್ ಚಟುವಟಿಕೆ ವೇಳೆ ಯಡಿಯೂರಪ್ಪ ವಿರುದ್ಧ ಬರೆದ ಪತ್ರದಲ್ಲಿ ಸಹಿ ಹಾಕಿದ್ದರು. ಜೊತೆಗೆ ಇವರು ಸವಿತಾ ಸಮಾಜಕ್ಕೆ ಸೇರಿದವರಾಗಿದ್ದಾರೆ. ಜೊತೆಗೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿದ್ದರು, ಅಲ್ಲದೆ ಪ್ರಸ್ತುತ ಬಳ್ಳಾರಿ ವಿಭಾಗ ಪ್ರಭಾರಿಗಳಾಗಿದ್ದಾರೆ. ಇನ್ನೂ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಹಾಗಾಗಿ ಇವರಿಗೆ ರಾಜ್ಯಸಭೆ ಪ್ರವೇಶ ಮಾಡಲು ಬಿಜೆಪಿ ಅವಕಾಶ ಮಾಡಿಕೊಟ್ಟಿದೆ.
ಇನ್ನೂ ಈರಣ್ಣ ಕಡಾಡಿ ಸಹ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿದ್ದರು. ಪ್ರಸ್ತುತ ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿಗಳಾಗಿದ್ದಾರೆ. ಅಲ್ಲದೆ ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ ಶ್ರಮಿಸಿದ್ದಾರೆ. ಇವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.








