ಮಂಗಳೂರು : ಇಲ್ಲಿನ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಮುರಾಡಿ ನಿವಾಸಿ ವಸಂತ್ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಈ ವಸಂತ್ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ ರಾವ್ ಅವರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದನಂತೆ. ವಾಸುದೇವ ರಾವ್, ಈ ವಿಷಯವನ್ನು ವಿಮಾನ ನಿಲ್ದಾಣ ಭದ್ರತಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಕೂಡಲೇ ಕಾರ್ಯಪ್ರೌರುತ್ತರಾದ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದರು. ಆ ಬಳಿಕ ಫೋನ್ ಕರೆ ಹುಸಿ ಬೆದರಿಕೆ ಎಂಬುವುದು ಖಚಿತವಾಗಿತ್ತು.
ಇದಾದ ಬಳಿಕ ವಿಮಾನ ನಿಲ್ದಾಣದ ಅಧಿಕಾರಿಗಳು ಬಜಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಟ್ರ್ಯಾಕ್ ಮಾಡಿ ಆರೋಪಿಯನ್ನು ಪತ್ತೆ ಮಾಡಿದ್ದರು. ಸದ್ಯ ಬಂಧಿತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭಿಸಿದೆ.









