ಬಾಗಲಕೋಟೆ: ಮದುವೆ ಸಮಾರಂಭಗಳ ಮೂಲಕ ಕೊರೊನಾ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮದುವೆ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ.
ಮದುವೆ ಸಮಾರಂಭಗಳು ಕರಾಳ ದಿನಗಳಾಗದಿರಲಿ ಎಂಬ ಕಾರಣಕ್ಕೆ ಕಲ್ಯಾಣ ಕಾರ್ಯಕ್ರಮಗಳನ್ನು ಬ್ಯಾನ್ ಮಾಡುವಂತೆ ಡಿಸಿಎಂ ಗೋವಿಂದ ಕಾರಜೋಳ ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ನಿಯಂತ್ರಣಕ್ಕೆ ಬಾರದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನರು ಭಾಗವಹಿಸುತ್ತಿದ್ದು, ಇದರ ಪರಿಣಾಮವಾಗಿ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಗೂ ಸೋಂಕು ಹರಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜನ ಸೇರಿಸಿ ಮದುವೆ ಆಚರಿಸಲು ಅನುಮತಿ ನೀಡಬಾರದು. ಉಪನೊಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನು ನಡೆಸಲು ಪರವಾನಗಿ ನೀಡುವಂತೆ ಗೋವಿಂದ ಕಾರಜೋಳ ಸೂಚನೆ ನೀಡಿದ್ದರು.
ಡಿಸಿಎಂ ಸೂಚನೆ ಮೇರೆಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.








