ಡೆಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಏ. 23ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಗಿತ್ತು. ಆದರೆ, ಕೋರ್ಟ್ ಏ. 23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ದೆಹಲಿ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಲಾಗಿದೆ. ಈ ಮೂವರು ನಾಯಕರು ಈಗಾಗಲೇ ಜೈಲಿನಲ್ಲಿದ್ದಾರೆ. ಕೆ. ಕವಿತಾರನ್ನು ಕೂಡ ಮಾರ್ಚ್ 15ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ. ಹೀಗಾಗಿ ಅವರಿಗೆ ಜಾಮೀನು ನೀಡಬೇಕೆಂದು ಅವರ ಪರ ವಕೀಲರು ವಾದಿಸಿದ್ದರು. ಆದರೆ, ಇಡಿ ಪರ ವಕೀಲರು, ಕವಿತಾ ಈ ಪ್ರಕರಣದ ಪ್ರಮುಖ ಆರೋಪಿ. ಮೊಬೈಲ್ ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತಮ್ಮ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ವಾದಿಸಿದ್ದಾರೆ.